ಬೆಳಗಾವಿ: ಸಂಗೊಳ್ಳಿ ರಾಯಣ್ಣನವರ ಹೆಸರು ದೇಶದಾದ್ಯಂತ ಪ್ರಸಿದ್ಧಿಗೊಳಿಸಲು ಅನುಕೂಲವಾಗುವಂತೆ ಸೈನಿಕ ಶಾಲೆಯನ್ನು ಆರಂಭಿಸಲಾಗಿದೆ. ಈ ಶಾಲೆ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಆಶಯ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಲಾಖೆಯ ಆಶ್ರಯದಲ್ಲಿ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಥಳೀಯ ಮಕ್ಕಳಿಗೆ ಪ್ರವೇಶ ಕಲ್ಪಿಸಲು ಅನುಕೂಲವಾಗುವಂತೆ ರಾಜ್ಯದಾದ್ಯಂತ ಸೈನಿಕ ಶಾಲೆಯ ಮಾದರಿಯಲ್ಲಿ ಸಂಗೊಳ್ಳಿ ರಾಯಣ್ಣ ಶಾಲೆಗಳನ್ನು ಸ್ಥಾಪಿಸಬೇಕಿದೆ. ಈ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯಿಸಿದರು.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ತಂಗಡಗಿ, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಕರ್ನಾಟಕ ಸರಕಾರವು ಭೂಮಿ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಿರುವುದರಿಂದ ಶೇ.65 ಮತ್ತು 35ರ ಅನುಪಾತದಲ್ಲಿ ಪ್ರವೇಶ ಕಲ್ಪಿಸಬೇಕು. ಇಂತಹ ಶಾಲೆಗಳನ್ನು ರಾಜ್ಯದಲ್ಲಿ ಹೋಬಳಿ ಮಟ್ಟದಲ್ಲಿ ಸ್ಥಾಪಿಸಬೇಕು ಎಂದು ಹೇಳಿದರು.
ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಸುರೇಶ್ ಬಿ.ಎಸ್. ಅವರು ಮಾತನಾಡಿ, ಸವದತ್ತಿ ಯಲ್ಲಮ್ಮ ದೇವಸ್ಥಾನ, ಸಂಗೊಳ್ಳಿ ರಾಯಣ್ಣ ಜನ್ಮಸ್ಥಳ, ಕಿತ್ತೂರು ರಾಣಿ ಚೆನ್ನಮ್ಮಳ ಜನ್ಮಸ್ಥಳ ಹೀಗೆ ಅನೇಕ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳಗಳಿರುವುದರಿಂದ ಈ ಕ್ಷೇತ್ರಗಳನ್ನು ಪ್ರವಾಸಿತಾಣಗಳನ್ನಾಗಿ ರೂಪಿಸುವ ಕೆಲಸ ನಡೆದಿದೆ ಎಂದರು.
ಮಾಜಿ ಸಚಿವ ಹಾಗೂ ಸಂಗೊಳ್ಳಿ ರಾಯಣ್ಣ ಕ್ಷೇತ್ರಾಧ್ಯಯನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಸೈನಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳ ಪ್ರವೇಶಕ್ಕೆ ಆದ್ಯತೆ ನೀಡುವಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ ಅವರು, ಭಾರತದಲ್ಲಿಯೇ ಅತ್ಯುತ್ತಮ ಮ್ಯೂಸಿಯಂ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ಸ್ಥಾಪಿಸಲಾಗಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ರೇವಣ್ಣ ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಮಹಾಂತೇಶ್ ಕೌಜಲಗಿ ಅವರು, 45 ವರ್ಷದ ಹಿಂದಿನ ಮಲಪ್ರಭಾ ಯೋಜನೆಯಡಿ ಬೈಲಹೊಂಗಲ್ ಮತಕ್ಷೇತ್ರದ 48 ಹಳ್ಳಿಗಳು ಮುಳುಗಡೆಯಾಗಿವೆ. ಈ ಗ್ರಾಮಗಳ ಜನರ ಅನುಕೂಲಕ್ಕಾಗಿ ಆರಂಭಿಸಲಾಗಿರುವ ಏತ ನೀರಾವರಿ ಯೋಜನೆಗಳು ಸ್ಥಗಿತಗೊಂಡಿದ್ದು, ಆ ಯೋಜನೆಗಳ ಅನುಷ್ಠಾನಕ್ಕೆ ಮುಂಬರುವ ಆಯವ್ಯಯದಲ್ಲಿ ವಿಶೇಷ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಗೊಳ್ಳಿ ಹಿರೇಮಠದ ಗುರು ಸಿದ್ಧಲಿಂಗೇಶ್ವರ ಸಂಸ್ಥಾನದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ಚನ ನೀಡಿದರು.
ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕೆಲಸಕಾರ್ಯಗಳಿಗೆ ಅನುಕೂಲವಾಗುವಂತೆ ನೂತನ ಮುಖ್ಯ ಎಂಜಿನಿಯರ್ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆನ್ ಲೈನ್ ಮೂಲಕ ಉದ್ಘಾಟಿಸಿದರು.
ಸರಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಸಂಸದರಾದ ಮಂಗಲ ಅಂಗಡಿ, ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ, ಶಾಸಕರಾದ ಆಸಿಫ್ ಸೇಠ್, ಗಣೇಶ್ ಹುಕ್ಕೇರಿ, ಬಾಬಾಸಾಹೇಬ್ ಪಾಟೀಲ, ಮಹೇಂದ್ರ ತಮ್ಮಣ್ಣವರ, ವಿಶ್ವಾಸ್ ವೈದ್ಯ, ಮಾಜಿ ಸಚಿವರು ಹಾಗೂ ಶಾಸಕರಾದ ಎಚ್.ವೈ.ಮೇಟಿ, ಎಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ನಾಗರಾಜ್, ಮಾಜಿ ಸಚಿವರಾದ ಅಂಜಲಿ ನಿಂಬಾಳ್ಕರ್, ಸಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಚಚಡಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.