ಬೆಳಗಾವಿ,: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ.07 ರಂದು ನಡೆಯಲಿದ್ದು, ಸುಗಮ‌ ಮತ್ತು ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು‌ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರವಿವಾರ (ಮೇ.05) ನಡೆದ ಪತ್ರಿಕಾಗೋಷ್ಠಿಯಲ್ಲಿ ಮೆ.07 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಕುರಿತು ಮಾಹಿತಿ ನೀಡಿದರು.
02-ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ 957559 ಪುರುಷ ಮತದಾರರು, 966134 ಮಹಿಳೆಯರು, 95 ಇತರೆ ಸೇರಿದಂತೆ 1923788 ಮತದಾರರಿದ್ದಾರೆ. ಅದೇ ರೀತಿಯಲ್ಲಿ 01-ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ 885200 ಪುರಷರು, 876414 ಮಹಿಳೆಯರು ಹಾಗೂ 80 ಇತರೆ ಮತದಾರರು ಸೇರಿದಂತೆ ಒಟ್ಟು 1761694 ಮತದಾರರಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ 2055870 ಪುರುಷ ಮತದಾರರು, 2049169 ಮಹಿಳಾ ಮತದಾರರು ಹಾಗೂ 186 ಇತರೆ ಮತದಾರರು ಸೇರಿದಂತೆ ಒಟ್ಟು 4105225 ಮತದಾರರಿದ್ದಾರೆ.
ಭಾರತ ಚುನಾವಣಾ ಆಯೋಗದ ಅನುಮೋದಿಸಿರುವಂತೆ ಮತದಾರರು ತಮ್ಮ ಮತ ಚಲಾಯಿಸುವ ಮೊದಲು ಮತದಾನ ಕೇಂದ್ರಗಳಲ್ಲಿ ಅವರ ಗುರುತಿಗಾಗಿ ಮತದಾರರ ಗುರುತಿಸಿ ಚೀಟಿ ತೋರಿಸಿ ಮತದಾನ ಮಾಡಬಹುದಾಗಿದೆ. ಮತದಾನದ ದಿನದಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.