ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್ )ಯು ರಾಜ್ಯೋತ್ಸವಕ್ಕೆ ವಿರುದ್ದವಾಗಿ ಕರಾಳ ದಿನಾಚರಣೆ ಆಚರಿಸಿದ್ದು, ಅದರ ವಿರುದ್ಧ ಕ್ರಮ ಜರುಗಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಂಇಎಸ್ ನ್ನು ನಿಷೇಧ ಮಾಡುವುದಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ. ನಿಷೇಧ ಮಾಡಿದರೆ ಅದರ ಕಡೆ ಒಲವು ವ್ಯಕ್ತವಾಗುವ ಸಾಧ್ಯತೆ ಇದೆ. ಹೀಗಾಗಿ ಅದನ್ನು ನಿಷೇಧಿಸುವುದಿಲ್ಲ ಎಂದು ಅವರು ಹೇಳಿದರು.
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಸಾವಿನ ಪ್ರಕರಣದ ಬಗ್ಗೆ ಆಸ್ಪತ್ರೆ ನಿರ್ದೇಶಕರಿಂದಲೇ ನವೆಂಬರ್ 5ರಂದು ಜಿ. ಪಂ. ಸಭೆಯಲ್ಲಿ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದರು. ಬೆಳಗಾವಿಯಲ್ಲಿ ಪ್ರಸಕ್ತ ವಿಧಾನ ಮಂಡಲದ ಅಧಿವೇಶನ ಡಿಸೆಂಬರ್ 9 ರಿಂದ ನಡೆಯಲಿದೆ. ಅಧಿವೇಶನಕ್ಕೆ ಎಲ್ಲಾ ತಯಾರಿಗಳನ್ನು ನಡೆಸಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆಗಳು ಸಹಜ. ಈ ಹಿಂದಿನ ಅನುಭವಗಳು ಇರುವುದರಿಂದ ಜಿಲ್ಲಾಡಳಿತಕ್ಕೆ ಯಾವುದೇ ತೊಂದರೆ ಎದುರಾಗದು ಎಂದು ಅವರು ತಿಳಿಸಿದರು.
ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರು ಭಾಗವಹಿಸಿದ್ದ ಕಾಂಗ್ರೆಸ್ ಮಹಾ ಅಧಿವೇಶನದ ನೆನಪಿನಲ್ಲಿ ಡಿಸೆಂಬರ್ ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸರ್ಕಾರ ಎರಡು ಕೋಟಿ ರೂಪಾಯಿ ಅನುದಾನ ತೆಗೆದಿರಿಸಿದೆ ಎಂದು ಅವರು ತಿಳಿಸಿದರು.
ಬೆಳಗಾವಿಯಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವಕ್ಕೆ ಮುಂದಿನ ವರ್ಷದಿಂದ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತದೆ. ಈ ಸಲ ರಾಜ್ಯೋತ್ಸವಕ್ಕೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಸೌಲಭ್ಯ ಕಲ್ಪಿಸಿಕೊಡಲಾಗಿದೆ ಎಂದು ಅವರು ತಿಳಿಸಿದರು.
ಬೆಳಗಾವಿ ಮಹಾನಗರದ ರಸ್ತೆಗಳ ದುರಸ್ತಿಗೆ ವಿಶೇಷ ಅನುದಾನ ನೀಡಲಾಗುತ್ತದೆ. ಈ ಸಲ ಮಳೆ ಅಧಿಕವಾಗಿರುವುದರಿಂದ ರಸ್ತೆಗಳು ಹಾಳಾಗಿವೆ. ಅವುಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ನಾವು ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.