ಬೆಳಗಾವಿ: ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ಅವರ ಅಗತ್ಯತೆ ಆಧರಿಸಿ ಒಂದು ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಂದಿಲ್ಲಿ ಹೇಳಿದರು.

ಹೆಸ್ಕಾಂ ನಿರ್ಲಕ್ಷ್ಯ ದಿಂದ ವಿದ್ಯುತ್ ತಂತಿ ತಗುಲಿ ಮರಣ ಹೊಂದಿರುವವರಿಗೆ ಕೂಡಲೇ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಬಾಡಿಗೆ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಸಾಧ್ಯವಿದ್ದಷ್ಟು ಶಾಲಾ ಆವರಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಿಸಲು ಆದ್ಯತೆ ನೀಡಬೇಕು. ಈ ರೀತಿ ಮಾಡುವುದರಿಂದ ಅಂಗನವಾಡಿ ಮಕ್ಕಳು ಮುಂದೆ ಅದೇ ಶಾಲೆಗೆ ಪ್ರವೇಶ ಪಡೆಯಲು ಅನುಕೂಲವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಗೃಹಲಕ್ಷ್ಮೀ ಯೋಜನೆ; ಗೃಹಲಕ್ಷ್ಮೀ ಯೋಜನೆಗೆ 17 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದ್ದು, ಜುಲೈ 20 ರಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ನೋಂದಣಿ ಪ್ರಕ್ರಿಯೆ ಹಾಗೂ ನೋಂದಾಯಿತ ಫಲಾನುಭವಿಗಳ ಸಂಖ್ಯೆ ಮತ್ತಿತರ ವಿಷಯಗಳನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಸುವರ್ಣ ವಿಧಾನಸೌಧದಲ್ಲಿ ಸೋಮವಾರ (ಜು.24) ನಡೆದ 2023-24 ನೇ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಸರಕಾರದ ಯೋಜನೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿಗಳನ್ನು ನೇಮಿಸಲಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಗೃಹಲಕ್ಷ್ಮೀ ಯೋಜನೆ ಕುರಿತು ಪ್ರತಿದಿನ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶಾಸಕರಾದ ಆಸಿಫ್(ರಾಜು) ಸೇಠ್, ಬೆಳಗಾವಿ ನಗರದಲ್ಲಿ ಇರುವ ಸರಕಾರಿ ಆಸ್ಪತ್ರೆಯಲ್ಲಿ ಶೇ.60 ರಷ್ಟು ನರ್ಸಿಂಗ್ ಸಿಬ್ಬಂದಿ ಕೊರತೆ ಇದೆ  ಎಂದು ಪ್ರಸ್ತಾಪಿಸಿದರು. ಮಹಾಂತೇಶ ಕೌಜಲಗಿ ಅವರು ಮಾತನಾಡಿ, ನರೇಗಾ ಯೋಜನೆಯಡಿ ಹೊಲಗಳಿಗೆ ಹೋಗುವ ರಸ್ತೆಗಳನ್ನು ನಿರ್ಮಿಸಿಕೊಡಬೇಕು. ಜಲಜಜೀವನ ಮಿಷನ್ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಕೂಡಲೇ ಹಸ್ತಾಂತರಿಸಬೇಕು. ಧಾರವಾಡ ಜಿಲ್ಲೆಗೆ ಹೋಲಿಸಿದರೆ ಪಕ್ಕದಲ್ಲೇ ಇರುವ ಬೆಳಗಾವಿ ಜಿಲ್ಲೆಯ ರೈತರಿಗೆ ಬೆಳೆವಿಮೆ ಪರಿಹಾರದಲ್ಲಿನ ತಾರತಮ್ಯ ಇದುವರೆಗೆ ಸರಿಪಡಿಸುತ್ತಿಲ್ಲ ಎಂದ ಅವರು, ತಾಲ್ಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಇದೆ. ದಾಸ್ತಾನು ಇದ್ದಾಗಲೂ ಬೇಡಿಕೆ ಸಲ್ಲಿಸಿದರೆ ಸಕಾಲದಲ್ಲಿ ಔಷಧ ಸಾಮಗ್ರಿ ಪೂರೈಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಅವರು ಮಾತನಾಡಿ, ಜಿಲ್ಲೆಯ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದ ಅವರು, ಹಿರೇಕೊಡಿ ಸಮೀಪದಲ್ಲಿ ಇರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿ 2014-15 ರಲ್ಲಿ ಆರಂಭಗೊಂಡಿದೆ. ಆದರೆ ಇದುವರೆಗೂ ಪೂರ್ಣಗೊಂಡಿರುವುದಿಲ್ಲ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳ ಗಮನಸೆಳೆದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ, ಶಾಸಕ ಭರಮಗೌಡ(ರಾಜು) ಕಾಗೆ ಮಾತನಾಡಿದರು.