ಬೆಳಗಾವಿ ಜು 27: ಮರು ಬಿತ್ತನೆ ಬಯಸುವ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ಹಾಗೂ ಗೊಬ್ಬರಗಳ ಸಮರ್ಪಕ ದಾಸ್ತಾನು ಇದ್ದು, ತಕ್ಷಣವೇ ಪೂರೈಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಅತಿವೃಷ್ಟಿಯಿಂದ ಬಾಧಿತಗೊಂಡಿರುವ ಗ್ರಾಮಗಳು ಮತ್ತು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಚಿಕ್ಕೋಡಿಯಲ್ಲಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು. ಸದ್ಯಕ್ಕೆ ಕುಡಿಯುವ ನೀರಿನ ಕೊರತೆ ಇರುವುದಿಲ್ಲ. ಕೆಲ ದಿನಗಳ ಹಿಂದಷ್ಟೇ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿತ್ತು. ಇದೀಗ ಅವುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.
ಸದ್ಯಕ್ಕೆ 1.61 ಲಕ್ಷ ಕ್ಯೂಸೆಕ್ ನೀರು ಆಲಮಟ್ಟಿ ಜಲಾಶಯದ ಒಳಹರಿವು ಇದೆ. 2.50 ಲಕ್ಷ ಕ್ಯೂಸೆಕ್ ಒಳಹರಿವು ಇದ್ದರೆ ಮಾತ್ರ ಪ್ರವಾಹ ಭೀತಿ ಎದುರಾಗುತ್ತದೆ. ಸದ್ಯಕ್ಕೆ ಅಷ್ಟೊಂದು ಒಳಹರಿವು ಇರುವುದಿಲ್ಲ. ಆದ್ದರಿಂದ ಪ್ರವಾಹ ಭೀತಿ ಸದ್ಯಕ್ಕಿಲ್ಲ. ಜಿಲ್ಲೆಯಲ್ಲಿ 30 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ. ಎಲ್ಲ ಕಡೆ ಪರ್ಯಾಯ ಮಾರ್ಗಗಳಿವೆ. ಆದಾಗ್ಯೂ ಮುಖ್ಯಮಂತ್ರಿಗಳು ನೀಡಿರುವ ಸೂಚನೆ ಮೇರೆಗೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಮಳೆಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮಣ್ಣಿನ ಮನೆಗಳು ಕುಸಿಯುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಇಂತಹ ಮನೆಗಳಲ್ಲಿ ವಾಸಿಸುವ ಕುಟುಂಬಗಳು ಸುರಕ್ಷಿತ ಮನೆಗಳಲ್ಲಿ ವಾಸಿಸಬೇಕು ಎಂದು ಪ್ರತಿಯೊಂದು ಪಂಚಾಯಿತಿಗಳಲ್ಲಿ ಡಂಗುರದ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರ್ಷಲ್ ಭೋಯರ್, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಶುಭಂ ಶುಕ್ಲಾ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನೆರೆಹಾನಿ-ಪ್ರದೇಶಗಳಿಗೆ ಭೇಟಿ: ವೇದಗಂಗಾ-ದೂಧಗಂಗಾ ನದಿ ಪ್ರವಾಹದಿಂದ ಬಾಧಿತವಾಗಿರುವ ನಿಪ್ಪಾಣಿ ತಾಲ್ಲೂಕಿನ ಬಾರವಾಡ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಊಟ ಮತ್ತಿತರ ಸೌಕರ್ಯಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುತ್ತಿರುವುದರಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಕಳೆದ ಬಾರಿ ಪ್ರವಾಹದಿಂದ ಮನೆ ಕಳೆದುಕೊಂಡಿರುವವರಿಗೆ ಬಿಡುಗಡೆಯಾಗಿರುವ ಅನುದಾನದಲ್ಲಿ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಅವಕಾಶ ನೀಡಬೇಕು. ಆದರೆ ಜಿಪಿಎಸ್ ತಾಂತ್ರಿಕ ಕಾರಣದಿಂದ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸುರಕ್ಷಿತ ಸ್ಥಳದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.