ಬೆಳಗಾವಿ: ಕ್ಷೇತ್ರದ ಅಭಿವೃದ್ದಿ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಬೆಳಗಾವಿ ಪ್ರವಾಸ ಪೂರ್ವ ನಿಯೋಜಿತವಾಗಿರಲಿಲ್ಲ. ಆದ್ದರಿಂದ ಮಾಹಿತಿ ಇರದ ಕಾರಣ ಅವರು ಬೆಳಗಾವಿಗೆ ಬರುವ ಮೊದಲೇ ನಾನು ಬೆಂಗಳೂರಿನಲ್ಲಿದ್ದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಅವರಿಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಿಂದ ಬಂದ ತಕ್ಷಣವೇ ಡಿಕೆಶಿ ಅವರನ್ನು ಭೇಟಿಯಾಗಲು ಬಂದಿದ್ದೇನೆ.  ಡಿಕೆ ಶಿವಕುಮಾರ ಅವರು ಬೆಳಗಾವಿ ರಾಜಕಾರಣದಲ್ಲಿ  ಹಸ್ತಕ್ಷೇಪ ಮಾಡ್ತಿಲ್ಲ. ಆ ಅನುಭವ ಆಗಿಲ್ಲ. ಡಿಕೆಶಿ ಹಾಗೂ ಸತೀಶ್ ಜಾರಕಿಹೊಳಿ ಮಧ್ಯೆ ಯಾವುದೇ ವೈಮನಸ್ಸಿಲ್ಲ ಎಂದು ಹೇಳಿದರು.

ಕಿತ್ತೂರು ಉತ್ಸವಕ್ಕೆ ಸಿಎಂ ಬರಲ್ಲ: ಇದೇ ದಿ.  23ರಂದು ಕಿತ್ತೂರು ಉತ್ಸವ ಉದ್ಘಾಟನೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ಸವಕ್ಕೆ ಆಗಮಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟನೆಗೆ ಆಗಮಿಸಿದರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಪ್ರವಾಸೋಧ್ಯಮ ಸಚಿವ ಎಚ್.ಕೆ.ಪಾಟೀಲ ಅವರು ಸಮಾರೋಪ ಸಮಾರಂಭಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.