ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣ ದಿನಕ್ಕೆ 5 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1500 ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಹಾಗೂ 3500 ಆರ್‌ಟಿಪಿಸಿಆರ್ ಪರೀಕ್ಷೆಗಳಿವೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಅಗತ್ಯವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರವೂ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಿಲ್ಲಿ ಭರವಸೆ ನೀಡಿದ್ದಾರೆ.

ಕೋವಿಡ್–19ರ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ನ ಕುಲಾಂತರಿ JN.1 ವೈರಾಣು ಹರಡುವಿಕೆ ತಡೆಯಲು ಮುನ್ನೆಚ್ಚರಿಕೆಯೇ ಮದ್ದಾಗಿದ್ದು, ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದಾರೆ.

 ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಜನಸಂದಣಿ ಹೆಚ್ಚು ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಬಗ್ಗೆ ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಲಾಗುವುದು. ಕೋವಿಡ್‌ಗೆ ಸಂಬಂಧಿಸಿ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಯನ್ನು ಸರ್ಕಾರ ಅನುಸರಿಸಲಿದೆ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಗಳನ್ನು ಅನುಸರಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿದೆ. ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಬೆಂಗಳೂರಿನಲ್ಲೇ 80 ಪ್ರಕರಣಗಳಿವೆ. 72 ಜನ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದಾರೆ. 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆರೆಯ ಕೇರಳದಲ್ಲಿ 2041, ತಮಿಳುನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತ್‌ನಲ್ಲಿ 12 ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ.