ಉಗರಗೋಳ(ಸವದತ್ತಿ): ವಿಧಾನಸಭೆ ಚುನಾವಣೆ ಮತದಾನ ಮುಗಿಸಿ, ವಿಶ್ರಾಂತಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಧರ್ಮಪತ್ನಿ ಸಮೇತ ಗುರುವಾರ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಆಶೀವಾದ ಪಡೆದುಕೊಂಡರು. ತಮ್ಮ ಮನೆದೇವರಾದ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಅಲ್ಲದೇ ದೇವಾಸ್ಥಾನದ ಆವರಣದಲ್ಲಿರುವ ಇತರ ದೇವಾಲಯಗಳಿಗೆ ಪ್ರದಕ್ಷಿಣೆ ಹಾಕಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ಪ್ರಚಾರ ಮಾಡಿದ್ದಾರೆ. ಹಾಗಾಗಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು ಈಗ ಬಂದಿರುವ ಚುನಾವಣೋತ್ತರ ಸಮೀಕ್ಷೆಗಳನ್ನು ನಾನು ಒಪ್ಪುವುದಿಲ್ಲ. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳಿದ್ದವು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದಿತು’ ಎಂದರು.
ಈ ಸಂದರ್ಭದಲ್ಲಿ ಸಿ.ಸಿ.ಪಾಟೀಲ, ಚನ್ನಮ್ಮ ಬೊಮ್ಮಾಯಿ, ರತ್ನಾ ಮಾಮನಿ, ಯಲ್ಲಮ್ಮ ದೇವಿ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಎಸ್‍ಪಿಬಿ ಮಹೇಶ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.