ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ನದಿಗಳಿಂದ ಆಲಮಟ್ಟಿ ಜಲಾಶಯಕ್ಕೆ 1.80 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ಇದ್ದು, ಆಲಮಟ್ಟಿಯಿಂದ ಇಂದಿನಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಗೊಳಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಘಟಪ್ರಭಾ ಜಲಾಶಯದಲ್ಲಿ ಸದ್ಯ ಶೇ.80 ರಷ್ಟು ಸಂಗ್ರಹಮಟ್ಟವನ್ನು ಆಧರಿಸಿ ಇಂದಿನಿಂದ ಹತ್ತು ಸಾವಿರ ಕ್ಯೂಸೆಕ್ ನೀರು ಬಿಡುಗಡೆಯ ಕುರಿತು ನಿರ್ಧರಿಸಲಾಗುವುದು.
ನೀರು ಬಿಡುಗಡೆಯ ಕುರಿತು ಎಲ್ಲ ತಹಶೀಲ್ದಾರರು ಹಾಗೂ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಾದ್ಯಂತ ಅನೇಕ ತಳಮಟ್ಠದ ಸೇತುವೆಗಳು ಮುಳುಗಡೆಯಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಬ್ಯಾರಿಕೇಡ್ ಅಳವಡಿಸಲಾಗಿರುತ್ತದೆ. ಬಹುತೇಕ ಕಡೆಗಳಲ್ಲಿ ಪರ್ಯಾಯ ರಸ್ತೆಗಳಿವೆ. ಆದಾಗ್ಯೂ ಪ್ರತಿಯೊಂದು ಸೇತುವೆಗಳ ಕಡೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಹೆದ್ದಾರಿ ಕಾಮಗಾರಿ; ಭೂಕುಸಿತ ಎಚ್ಚರಿಕೆ ವಹಿಸಲು ನಿರ್ದೇಶನ:
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ಕಾರ್ಮಿಕರ ವಸತಿ ಶೆಡ್, ಡಾಬಾ, ಸಣ್ಣಪುಟ್ಟ ಅಂಗಡಿಗಳು ಕಂಡುಬಂದಿರುತ್ತವೆ. ಭೂಕುಸಿತ ಉಂಟಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ತಕ್ಷಣವೇ ಅವುಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಬೆಳಗಾವಿ ನಗರದಲ್ಲಿಯೂ ಚರಂಡಿ, ಗಟಾರುಗಳನ್ನು ಸ್ವಚ್ಛಗೊಳಿಸಿ ಮಳೆಯ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ನಗರ ಪ್ರದೇಶ ಸೇರಿದಂತೆ ಪಾಶ್ವಾಪುರ, ಹಗೇದಾಳ, ಬಗರನಾಳ, ಅಂಕಲಗಿ ಮತ್ತಿತರ ಕಡೆ ಬಳ್ಳಾರಿ ನಾಲಾದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿತುಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಆಹಾರ ಸಾಮಗ್ರಿ ದಾಸ್ತಾನು: ಜಿ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ, ನದಿತೀರದ ಗ್ರಾಮಗಳ ಜತೆಗೆ ತೋಟದ ವಸತಿಗಳ ಮೇಲೆಯೂ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಕೇಶ್ವರ, ಯಮಕನಮರಡಿ ಬಳಿ ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ ನಡೆಯುತ್ತಿರುವ ಅನೇಕ ಕಡೆಗಳಲ್ಲಿ ದೊಡ್ಡ ದೊಡ್ಡ ಕಂದಕಗಳನ್ನು ಕೊರೆಯಲಾಗಿರುತ್ತದೆ. ಇಂತಹ ಕಡೆ ಭೂಕುಸಿತದ ಸಾಧ್ಯತೆ ಇರುವುದರಿಂದ ಈ ಬಗ್ಗೆ ಎಚ್ಚರಿಕೆಯನ್ನು ವಹಿಸಬೇಕು ಎಂದು ತಿಳಿಸಿದರು.
ಪ್ರವಾಹದಿಂದ ಬಾಧಿತಗೊಳ್ಳುವ ಗ್ರಾಮಗಳಲ್ಲಿ ಗರ್ಭಿಣಿ ಮಹಿಳೆಯರು ಹಾಗೂ ಹಿರಿಯ ನಾಗರಿಕರ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು.
ಅಂಗನವಾಡಿ, ಶಾಲೆಗಳಲ್ಲಿ ಆಹಾರ ಪದಾರ್ಥಗಳ ದಾಸ್ತಾನು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ರಾಹುಲ್ ಶಿಂಧೆ ಸೂಚನೆ ನೀಡಿದರು.