ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿ/ಪ್ರವಾಹ ಸಂಭವನೀಯ ಹಿನ್ನಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಶುಕ್ರವಾರ ಖಾನಾಪುರ ತಾಲೂಕಿನ ಪ್ರವಾಹ ಪೀಡಿತ, ಮಳೆ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಾಂಬೋಟಿ ರಸ್ತೆಯ ಕುಸುಮಳ್ಳಿ‌ ಸೇತುವೆ, ವೀಕ್ಷಿಸಿ, ಬಳಿಕ ಖಾನಾಪುರದಿಂದ ಜಾಂಬೋಟಿಗೆ ಸಂಪರ್ಕ ಕಲ್ಪಿಸುವ ಮಧ್ಯದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಸ್ಥಿತಿಗತಿ ಪರಿಶೀಲಿಸಿದರು.
ಖಾನಾಪುರ ಪ್ರವಾಸಿ ಮಂದಿರದಲ್ಲಿ ವಿವಿಧ ಗ್ರಾಮಗಳ ಜನರ ಅಹವಾಲು ಆಲಿಸಿದರು.
ಸಚಿವರನ್ನು ಭೇಟಿ ಮಾಡಿದ ಮಲಪ್ರಭಾ ನದಿತೀರದ ಹಿರೇಹಟ್ಟಿಹೊಳಿ ಗ್ರಾಮದ ಜನರು, ಸಂಪೂರ್ಣ ಗ್ರಾಮವೇ ಜಲಾವೃತಗೊಳ್ಳುವುದರಿಂದ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿಕೊಂಡರು.

ಪ್ರತಿವರ್ಷ ಮಳೆಗಾಲದಲ್ಲಿ ಹಿರೇಹಟ್ಟಿಹೊಳಿ ಮುಳುಗಡೆಯಾಗುವುದರಿಂದ ವೈದ್ಯಕೀಯ ಸೌಲಭ್ಯ, ಶಿಕ್ಷಣ ಮತ್ತಿತರ ಮೂಲಸೌಕರ್ಯಗಳು ಗ್ರಾಮಸ್ಥರಿಗೆ ಸಿಗುತ್ತಿಲ್ಲ. ಆದ್ದರಿಂದ ಇದಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.