ಬೆಳಗಾವಿ: ಬೆಳಗಾವಿ ಜನತೆಯ ಬಹುದಿನಗಳ ಬೇಡಿಕೆಯಾದ ‘ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸಲು ನಡೆಸಿದ ಪ್ರಯತ್ನ ಈಗ ಸಾಕಾರಗೊಂಡಿದೆ. ಹುಬ್ಬಳ್ಳಿಯವರೆಗೆ ಸೇವೆ ವಿಸ್ತರಣೆಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸೆ.15ರಂದು ರೈಲಿಗೆ ಚಾಲನೆ ನೀಡಲಿದ್ದಾರೆ’ ಎಂದು ಸಂಸದ ಜಗದೀಶ್ ಶೆಟ್ಟರ್ ಅವರು ಹೇಳಿದರು.
ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೆಲವು ತಿಂಗಳಗಳ ಹಿಂದೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿಯಾಗಿ, ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸಬೇಕು. ಬೆಂಗಳೂರು-ಧಾರವಾಡ ವಂದೇ ಭಾರತ್‌ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದೆ. ಈಗ ಪುಣೆ–ಬೆಳಗಾವಿ-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್‌ ರೈಲು ಸೇವೆ ಆರಂಭವಾಗಿದೆ. 15ರಂದು ಬೆಳಗಾವಿ ನಿಲ್ದಾಣದಲ್ಲೂ ಕಾರ್ಯಕ್ರಮ ಆಯೋಜಿಸಿ, ರೈಲು ಸ್ವಾಗತಿಸಲಾಗುವುದು’ ಎಂದರು.
‘ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಲು ಎದುರಾಗಿದ್ದ ತೊಡಕುಗಳು ಈಗ ನಿವಾರಣೆಯಾಗಿದ್ದು, ಬೆಳಗಾವಿಯವರೆಗೆ ಸೇವೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
‘ಬೆಳಗಾವಿ- ಕಿತ್ತೂರು-ಧಾರವಾಡ ನೇರ ರೈಲು ಮಾರ್ಗ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಒಂದೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಆ ಕಾಮಗಾರಿಯೂ ಶೀಘ್ರ ಆರಂಭವಾಗಲಿದೆ’ ಎಂದು ಪ್ರಶ್ನೆಗೆ ಉತ್ತರಿಸಿದರು.