ಬೆಳಗಾವಿ: ಸುಮಾರು 50 ಕೋ. ರೂ. ವೆಚ್ಚದಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಂದಿಲ್ಲಿ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ. ಬೆಳಗಾವಿಗೆ ಸ್ವಲ್ಪ ತಡವಾದರೂ ಅತ್ಯುತ್ತಮವಾದ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಸಾರ್ವಜನಿಕರ ಬೇಡಿಕೆ ಈಡೇರಿಸಲಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸಲು ನಮ್ಮ ಕ್ರೀಡಾಪಟುಗಳಿಗೆ ವೇದಿಕೆಯನ್ನು ಒದಗಿಸುವುದು ಬಹಳ ಮುಖ್ಯ. ಹೀಗಾಗಿ ಈ ಅಗತ್ಯವನ್ನು ಮನಗಂಡು ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ 10 ಕೋ.ರೂ. ನೀಡಲಾಗಿದ್ದು, ಮೂರು ವರ್ಷದಲ್ಲಿ ಸುಸಜ್ಜಿತವಾದ ಭವ್ಯ ಕ್ರೀಡಾಂಗಣ ಆರಂಭವಾಗಲಿದೆ ಎಂದು ಹೇಳಿದರು.
ಸ್ಥಳೀಯ ನಿವಾಸಿಗಳ ಸಹಕಾರದಿಂದ ಮಹತ್ವದ ಕಾರ್ಯ ಕೈಗೊಳ್ಳಲು ಅನುಕೂಲವಾಗಿದೆ. ಭವ್ಯ ದೇವಸ್ಥಾನ ಕೂಡ ನಿರ್ಮಾಣವಾಗಲಿದ್ದು, ಸ್ಥಳೀಯ ಶಾಸಕರ ಜೊತೆ ಚರ್ಚೆ ನಡೆಸಿ ಸ್ಥಳೀಯ ನಿವಾಸಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಅನೂಕೂಲವಾಗುವಂತೆ ಸಮುದಾಯ ಭವನ ನಿರ್ಮಾಣಕ್ಕೆ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರವು ಈಗಾಗಲೇ ರಾಮತೀರ್ಥನಗರದ ಸರ್ವೆ ನಂ 633,622, 623ರಲ್ಲಿ 9.26 ಎಕರೆ ಭೂಮಿಯನ್ನು ನೀಡಿದೆ. ಇನ್ನೂ 6 ಎಕರೆ ಜಾಗ ನೀಡಲು ಸ್ಥಳೀಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದರು.
ಶಾಸಕ ರಾಜು ಸೇಠ ಅವರು ಮಾತನಾಡಿ, ಸುಮಾರು 15 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಸಚಿವ ಸತೀಶ ಜಾರಕಿಹೊಳಿ ಅವರು ಮುತುರ್ವಜಿ ವಹಿಸಿ ಕ್ರೀಡಾಂಗಣ ನಿರ್ಮಾಣಕ್ಕೆ 50 ಕೋಟಿ. ರೂ. ತ್ವರಿತವಾಗಿ ಬಿಡುಗಡೆ ಮಾಡಿದ್ದಾರೆ. ಇನ್ನೂ 150 ಕೋ.ರೂ.ಗಳನ್ನು ನೀಡುವಂತೆ ಕೋರಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಮ್ಮಹದ್‌ ರೋಷನ್‌ , ಪೊಲೀಸ್‌ ಆಯುಕ್ತರಾದ ಯಡಾ ಮಾರ್ಟಿನ್‌, ಎಸ್ಪಿ ಭೀಮಾ ಶಂಕರ ಗುಳೇದ, ಬೂಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಯುವಸಬಲೀಕರಣ, ಕ್ರೀಡಾ ಇಲಾಖೆ ಉಪನಿರ್ದೇಶಕ ಬಿ. ಶ್ರೀನಿವಾಸ್‌, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಸೊಬರದ, ವಿನಯ ನಾವಲಗಟ್ಟಿ, ಮಲಗೌಡ ಪಾಟೀಲ, ನಗರ ಸೇವಕ ಹನುಮಂತ ಕೊಂಗಾಲಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.