ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದು, ಸರ್ಕಾರದ ಸಂಪುಟ ದರ್ಜೆ ಸಚಿವರಾಗಿ ಬೆಳಗಾವಿಯ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ ಮತ್ತು ಡಾ ಬಿ ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ, ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಿದ್ದರಾಮಯ್ಯ ಸಿಎಂ ಹಾಗೂ ಡಿವಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರೆ ಇದೇ ಸಂದರ್ಭದಲ್ಲಿ ಎಂಟು ಜನ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿತು.
ಯಮಕನಮರಡಿ ಕ್ಷೇತ್ರದಿಂದ ಕಳೆದ ಮೂರು ಬಾರಿ ಶಾಸಕರಾಗಿದ್ದ ಸತೀಶ್ ಜಾರಕಿಹೊಳಿ ಅವರು ನಾಲ್ಕನೇ ಬಾರಿಗೆ ವಿಜಯ ಪತಾಕೆ ಹಾರಿಸಿದ್ದಾರೆ. ಈ ಹಿಂದೆ ಧರ್ಮಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದ ಇವರು. ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಇವರು ಬೆಳಗಾವಿ ರಾಜಕಾರಣದಲ್ಲಿ ತಮ್ಮದೇ ಹೆಸರು ಹೊಂದಿದ್ದಾರೆ. ಪ್ರತಿಷ್ಠಿತ ಜಾರಕಿಹೊಳಿ ಮನೆತನ ಐವರು ಸಹೋದರರಲ್ಲಿ ಒಬ್ಬರಾದ ಇವರು ಈ ಬಾರಿ ಬಿಜೆಪಿ ಅಭ್ಯರ್ಥಿ ವಿರುದ್ಧ ಬೃಹತ್ ಅಂತರದ ಗೆಲುವು ಸಾಧಿಸಿದ್ದರು.