ಬೆಳಗಾವಿ: ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ತವರು ಜಿಲ್ಲೆ ಬೆಳಗಾವಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಲಕರ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ ಸಂಜೆ ಉಭಯ ನಾಯಕರನ್ನು ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.
ಬೆಳಿಗ್ಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಪುಷ್ಪವೃಷ್ಟಿಗೈದು ಸ್ವಾಗತಿಸಲಾಗಿತ್ತು. ಇದಾದ ಬಳಿಕ ಸತೀಶ ಜಾರಕಿಹೊಳಿ ಕಿತ್ತೂರು ಪಟ್ಟಣಕ್ಕೆ ತೆರಳಿ ಅಲ್ಲಿನ ರಾಣಿ ಚನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬೈಲೂರಿನ ನಿಷ್ಕಲ ಮಂಟಪಕ್ಕೆ ತೆರಳಿ ನಿಜಗುಣಾನಂದ ಸ್ವಾಮೀಜಿ ಆಶೀರ್ವಾದ ಪಡೆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಸುಳೇಭಾವಿ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು, ನಂತರ ರಾಜಹಂಸಗಡ ಕೋಟೆ ಆವರಣದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
