ಬೆಳಗಾವಿ,: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ ಬುಧವಾರ ದಿ. 18 ರಂದು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.
ಗುರುವಾರ ದಿ. 19ರಂದು ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಜೂನ್ 20 ರಿಂದ ಯಾವುದೇ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಇಲ್ಲ.
ಹೆಸ್ಕಾಂ ಸೂಚನೆ
ಮಳೆಗಾಲದ ಹಿನ್ನೆಲೆಯಲ್ಲಿ (ಹೆಸ್ಕಾಂ) ಬೆಳಗಾವಿ ವಿಭಾಗವು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಸೂಚಿಸಿದ್ದು, ವಿದ್ಯುತ್ ಅವಘಡಗಳು ಸಂಭವಿಸದಂತೆ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ. ಮಳೆಗಾಲ ಸಂದರ್ಭದಲ್ಲಿ ಗಾಳಿ, ಮಳೆ, ಸಿಡಿಲು, ಮಿಂಚು ಬಂದಾಗ ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕ (ಟ್ರಾನ್ಸ್ಫಾರ್ಮರ್) ಗಳಲ್ಲಿರುವ ವಿದ್ಯುತ್ ತಂತಿಗಳು ಜನರಿಗೆ ಅಪಾಯ ತಂದೊಡ್ಡಬಹುದು. ಈ ಕಾರಣದಿಂದ ಸಾರ್ವಜನಿಕರು ಜಾಗೃತೆ ವಹಿಸಬೇಕಾಗಿದ್ದು, ಸುರಕ್ಷಿತ ಅಂತರ ಕಾಯ್ದುಕೊಳ್ಳಲು ತಿಳಿಸಿದೆ. ಮರಗಳ ಕೊಂಬೆಗಳು ವಿದ್ಯುತ್ ತಂತಿಗೆ ತಾಗುವಂತಿದ್ದರೆ ಈ ಕುರಿತು ಇಲಾಖೆಗೆ ಮಾಹಿತಿ ನೀಡಬೇಕು.