ಬೆಳಗಾವಿ ಜೂ.13, ನೀರಾವರಿ, ಹೆದ್ದಾರಿ, ರಿಂಗ್ ರಸ್ತೆ, ಫ್ಲೈ ಓವರ್ ನಿರ್ಮಾಣ, ಭೂಸ್ವಾಧೀನ, ಪುನರ್ವಸತಿ ಹೀಗೆ ಜಿಲ್ಲೆಯ ಒಟ್ಟಾರೆ ಅಭಿವೃದ್ಧಿಗೆ ಸಂಬಂಧಿಸಿದ ಪ್ರತಿಯೊಂದು ಯೋಜನೆಯ ಅನುಷ್ಠಾನ ಪ್ರಕ್ರಿಯೆ ಚುರುಕುಗೊಳಿಸಬೇಕು; ಯೋಜನೆಗೆ ಅಡ್ಡಿಯಾಗುವ ತಾಂತ್ರಿಕ ತೊಂದರೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಜೂ.13) ನಡೆದ ಭೂಸ್ವಾಧೀನ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ರಿಂಗ್ ರಸ್ತೆ, ರೈಲ್ವೆ ಯೋಜನೆ ಸೇರಿದಂತೆ ಮಹತ್ವದ ಯೋಜನೆಗಳ ಕುರಿತು ವಿಸ್ತೃತವಾದ ಚರ್ಚೆ ನಡೆಸಿದ ಅವರು, ಭೂಸ್ವಾಧೀನ ಅಥವಾ ನ್ಯಾಯಾಲಯದ ತಡೆಯಾಜ್ಞೆಯಂತಹ ತಾಂತ್ರಿಕ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಿ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಸ್ಥಳಾಂತರ-ಪುನರ್ವಸತಿ ಪ್ರಕ್ರಿಯೆ ತ್ವರಿತಗೊಳಿಸಲು ನಿರ್ದೇಶನ:
ಕಮಲಾಪುರ ಗ್ರಾಮದ ಸ್ಥಳಾಂತರಕ್ಕೆ ಅಗತ್ಯವಾದ 72 ಎಕರೆ ಜಾಗೆ ಇದೆ. ಆದರೆ ಗ್ರಾಮಸ್ಥರು ಗ್ರಾಮ ಪಕ್ಕದಲ್ಲೇ ಇರುವ ಜಾಗೆಗೆ ಸ್ಥಳಾಂತರಕ್ಕೆ ಮನವಿ ಮಾಡಿಕೊಂಡಿದ್ದು, ಈ ಬಗ್ಗೆ ಅಧಿಕಾರಿಗಳು ಸಭೆ ನಡೆಸಿ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಮುಳುಗಡೆ ಪ್ರದೇಶ ಎಂದು ಘೋಷಿಸಲಾಗಿರುವ ಗ್ರಾಮಗಳ ಸ್ಥಳಾಂತರ ಅಥವಾ ಪುನರ್ವಸತಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ಒಂದು ವೇಳೆ ನ್ಯಾಯಾಲಯದಲ್ಲಿ ತಡೆ ಅಥವಾ ಪ್ರಕರಣಗಳು ಇದ್ದಲ್ಲಿ ಅವುಗಳನ್ನು ಪರಿಹರಿಸಲು ತಕ್ಷಣವೇ ಕ್ತಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಪುನರ್ವಸತಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸಕಾಲದಲ್ಲಿ ಪೂರ್ಣಗೊಳಿಸಲು ನೀರಾವರಿ ಇಲಾಖೆಯ ಅಧಿಕಾರಿಗಳೇ ಮುತುವರ್ಜಿ ವಹಿಸಬೇಕು.
ಗ್ರಾಮಸ್ಥರ ಅಭಿಪ್ರಾಯಗಳು ಹಾಗೂ ನ್ಯಾಯಾಲಯದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಚಿಕ್ಕೋಡಿ ಸಮೀಪದ ಜಾಗನೂರ ಸೇರಿದಂತೆ ಐದು ಗ್ರಾಮಗಳ ಸ್ಥಳಾಂತರಕ್ಕೆ ಸೂಕ್ತ ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು ಎಂದು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಅಥಣಿ ತಾಲ್ಲೂಕಿನಲ್ಲಿ ಈಗಾಗಲೇ ಸಿದ್ಧಪಡಿಸಲಾಗಿರುವ ಪುನರ್ವಸತಿ ಕೇಂದ್ರದ ನಿವೇಶನಗಳನ್ನು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಕೂಡಲೇ ಸಂಬಂಧಿಸಿದ ಗ್ರಾಮಸ್ಥರಿಗೆ ವಿತರಿಸಬೇಕು. ಗ್ರಾಮಸ್ಥರು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಗೊಂಡಾಗ ಅಗತ್ಯ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ರೈಲ್ವೆ, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆ, ನಗರ ನೀರು ಸರಬರಾಜು, ರಾಷ್ಟ್ರೀಯ ಹೆದ್ದಾರಿ, ಭೂಸ್ವಾಧೀನ, ಕಂದಾಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.