ಬೆಳಗಾವಿ,: ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಮೂಲಭೂತ ಸೌಲಭ್ಯ ಹಾಗೂ ಅಭಿವೃದ್ದಿಗಾಗಿ ರಾಜ್ಯ ಸಚಿವ ಸಂಪುಟದಲ್ಲಿ 215 ಕೋಟಿ ರೂ.ಗಳ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಅನುಷ್ಠಾನಾಧಿಕಾರಿಗಳನ್ನಾಗಿ ನೇಮಿಸಲಾಗಿಈ ಕುರಿತು ಟೆಂಡರ್ ಕರೆದು, ಸೆ.15 ರೊಳಗಾಗಿ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗುವುದು. 2026ರ ಡಿ.25 ರೊಳಗಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು.
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇತ್ತಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಲ್ಲಮ್ಮಗುಡ್ಡದಲ್ಲಿ ವಸತಿಗೃಹ, ಅತಿಥಿಗೃಹ ನಿರ್ಮಿಸಿಕೊಡಲು ಅನೇಕ ದಾನಿಗಳು ಮುಂದೆ ಬರುತ್ತಿದ್ದು, ಅವರಿಗೆ ಅಗತ್ಯ ಜಾಗೆಯನ್ನು ನೀಡಲಾಗುವುದು. ಅಲ್ಲಿ ನಿರ್ಮಿಸಲಾಗುವ ಕಟ್ಟಡವು ದೇವಸ್ಥಾನಕ್ಕೆ ಸೇರಲಿದೆ.
ದಾನಿಗಳ ಜತೆ ಒಡಂಬಡಿಕೆ ಮಾಡಿಕೊಂಡು ಅತಿಥಿಗೃಹ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು. ದೇವಸ್ಥಾನದ ವತಿಯಿಂದಲೇ ವಿನ್ಯಾಸ ಒದಗಿಸಲಾಗುವುದು. ಇದೇ
ಆಗಸ್ಟ್ 26ರಂದು ದಾನಿಗಳ ಸಭೆ ಕರೆದು ಯೋಜನೆಯನ್ನು ವಿವರಿಸಲಾಗುವುದು. ನಂತರ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ರೂ. 215 ಕೋಟಿ ವೆಚ್ಚದಲ್ಲಿ 97 ಕೋಟಿ ರೂಪಾಯಿ ದೇವಸ್ಥಾನ ಅಭಿವೃದ್ದಿ ಮಂಡಳಿಯಿಂದ ನೀಡಲಾಗುತ್ತದೆ. ಎಸ್.ಎ.ಎಸ್.ಸಿ.ಐ. ಸಾಲ ಯೋಜನೆಯಡಿ ಕೇಂದ್ರ ಸರ್ಕಾರ 100 ಕೋಟಿ ರೂಪಾಯಿ ಬಡ್ಡಿ ರಹಿತ ಸಾಲ ಒದಗಿಸಿದೆ ಎಂದು ಎಚ್.ಕೆ.ಪಾಟೀಲ ಸ್ಪಷ್ಟಪಡಿಸಿದರು.
ಬೆಳಗಾವಿ ಸೇರಿದಂತೆ ರಾಜ್ಯದ ಗಡಿಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಸದೃಢಗೊಳಿಸಲು ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಬಗ್ಗೆ ಕನ್ನಡಪರ ಸಂಘಟನೆಗಳು ಬೆಳಗಾವಿ ಜಿಲ್ಲೆಯಲ್ಲಿ ಸ್ಥಳೀಯವಾಗಿ ಒಂದು ಸಮಿತಿಯನ್ನು ರಚಿಸಿಕೊಂಡು ಗಡಿಭಾಗದ ಕನ್ನಡ ಶಾಲೆಗಳ ಸ್ಥಿತಿಗತಿಯ ಬಗ್ಗೆ ಅಧ್ಯಯನ ಮಾಡಿಕೊಂಡು ನಿಯೋಗದ ಜತೆ ಬಂದರೆ ಶಿಕ್ಷಣ ಸಚಿವರ ಜೊತೆ ವಿಸ್ತೃತವಾಗಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್.ಕೆ.ಪಾಟೀಲ ತಿಳಿಸಿದರು.
ಈ ವೇಳೆ ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಸಿ.ಇ.ಓ. ರಾಹುಲ್ ಶಿಂಧೆ, ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಸೇರಿ ಮತ್ತಿತರರು ಇದ್ದರು.