ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ 100 ಕೋ.ರೂ.ಗಳ ಅನುದಾನ ಕಲ್ಪಿಸಲಾಗಿದ್ದು, ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ ರಸ್ತೆ ಮತ್ತು ಸೇತುವೆಗಳ ನಿರ್ಮಾಣಕ್ಕಾಗಿ ಕಳೆದ ಎರಡು ವರ್ಷಗಳಲ್ಲಿ ₹1,815 ಕೋಟಿ ಅನುದಾನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಅನೇಕ ಜನಪರ ಯೋಜನೆ ರೂಪಿಸಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆ ಹಾದಿಯಲ್ಲಿ ದೃಢವಾದ ಹೆಜ್ಜೆ ಇರಿಸಿದೆ. ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ 215 ಕೋ ರೂ.ಗಳ ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕಾಮಗಾರಿಗೆ ಶೀಘ್ರ ಕಾರ್ಯಾದೇಶ ನೀಡಲಾಗುವುದು’ ಎಂದು ಭರವಸೆ ನೀಡಿದರು.
‘ಶಿಕ್ಷಣ, ವಿಜ್ಞಾನ–ತಂತ್ರಜ್ಞಾನ, ಕ್ರೀಡೆ, ವೈದ್ಯಕೀಯ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಭಾರತ ಸಾಧನೆ ಮಾಡಿದ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಅಪ್ರತಿಮ ಹೋರಾಟಗಾರರನ್ನು ದೇಶಕ್ಕೆ ಕೊಡುಗೆ ನೀಡಿದ ಜಿಲ್ಲೆ ಬೆಳಗಾವಿ. ಸ್ವಾತಂತ್ರ್ಯ ಹೋರಾಟದಲ್ಲೂ ಇದು ಮುಂಚೂಣಿಯಲ್ಲಿತ್ತು. ದೇಶಕ್ಕಾಗಿ ದುಡಿದ ಅನೇಕ ಮಹನೀಯರನ್ನು ಸದಾ ಸ್ಮರಿಸಬೇಕು’ ಎಂದರು.
‘ದೇಶದ ಏಕತೆ, ಸಮಗ್ರತೆ ರಕ್ಷಣೆಯೊಂದಿಗೆ ಪ್ರಗತಿಯ ರಥ ಮತ್ತು ಸ್ವಾತಂತ್ರ್ಯದ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ’ ಎಂದು ತಿಳಿಸಿದರು.
ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕ ಇಲಾಖೆ, ಗೃಹರಕ್ಷಕ ದಳ, ಮಹಾನಗರ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರು, ಎನ್ಸಿಸಿ ಕೆಡೆಟ್ಗಳು, ಭಾರತ ಸೇವಾದಳದವರು ಮತ್ತು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಆಕರ್ಷಕವಾದ ಪಥಸಂಚಲನ ನಡೆಸಿದರು.
ಸಾವಯವ ಕೃಷಿ ಕ್ಷೇತ್ರದಲ್ಲಿ ತುಕಾರಾಮ ನಾಯಿಕ, ಲಕ್ಷ್ಮಿ ಲೋಕೂರ, ಸಾಮಾಜಿಕ ಸೇವೆ ಕ್ಷೇತ್ರದಲ್ಲಿ ಡಾ.ಮಹಾಂತೇಶ ರಾಮಣ್ಣವರ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ವಿ ಪಾಟೀಲ, ರೂಪಾ ಪಾಟೀಲ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು.
ಶಾಸಕ ಆಸಿಫ್ ಸೇಠ್, ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪವಿಭಾಗಾಧಿಕಾರಿ ಶ್ರವಣ ನಾಯಕ, ತಹಶೀಲ್ದಾರ್ ಬಸವರಾಜ ನಾಗರಾಳ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಸಚಿವ ಸತೀಶ ಜಾರಕಿಹೊಳಿ ಅವರು, ರಾಯಣ್ಣನ ಜನ್ಮದಿನದ ಅಂಗವಾಗಿ ನ್ಯಾಯಾಲಯ ಆವರಣದಲ್ಲಿನ ಸಂಗೊಳ್ಳಿ ರಾಯಣ್ಣ ಹಾಗೂ ಚನ್ನಮ್ಮನ ವೃತ್ತದಲ್ಲಿನ ರಾಣಿ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.
ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ 100ಕೋ.ರೂ.ಗಳ ಅನುದಾನ
