ನವದೆಹಲಿ: ಸೇವಾನಿರತ ಶಿಕ್ಷಕರ ಸೇವಾ ಷರತ್ತುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯಿಂದ (TET) ಪ್ರಸ್ತುತ ಸೇವೆಯಲ್ಲಿರುವ ಶಿಕ್ಷಕರಿಗೆ ವಿನಾಯಿತಿ ನೀಡಬೇಕು. ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೊಸ ಕೇಂದ್ರೀಯ ವಿದ್ಯಾಲಯ ಮತ್ತು ನವೋದಯ ಶಾಲೆಗಳನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಸಂಸದ ಜಗದೀಶ್ ಶೆಟ್ಟರ ಅವರು ಕೇಂದ್ರ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ನವದೆಹಲಿಯ ಸಂಸದ ಭವನದಲ್ಲಿ ಕೇಂದ್ರ ಶಿಕ್ಷಣ ಸಚಿವರನ್ನು ಭೇಟಿಯಾದ ಅವರು, ಇತ್ತೀಚಿನ ದಿನಗಳಲ್ಲಿ ಸೇವಾನಿರತ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಅನ್ವಯಿಸುವ ಹಿನ್ನೆಲೆಯಲ್ಲಿ ಅನೇಕ ಶಿಕ್ಷಕರು ತಮ್ಮ ಸೇವೆಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.
ಸೇವಾನಿರತ ಶಿಕ್ಷಕರ ಸೇವಾ ಷರತ್ತುಗಳಿಗೆ ರಕ್ಷಣೆ ನೀಡುವ ಅಗತ್ಯವಿದ್ದು, ಈ ಕುರಿತು ಸೂಕ್ತವಾಗಿ ಪರಿಶೀಲಿಸಿ ಪ್ರಸ್ತುತ ಸೇವೆಯಲ್ಲಿರುವ ಶಿಕ್ಷಕರನ್ನು ಶಿಕ್ಷಕರ ಅರ್ಹತಾ ಪರೀಕ್ಷೆಯ ವ್ಯಾಪ್ತಿಯಿಂದ ಕೈಬಿಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
*ಕೇಂದ್ರೀಯ ವಿದ್ಯಾಲಯ:*
ಬೆಳಗಾವಿ ಜಿಲ್ಲೆ ಶೈಕ್ಷಣಿಕವಾಗಿ ಪ್ರಮುಖ ಕೇಂದ್ರವಾಗಿದ್ದು, ಜನಸಂಖ್ಯೆ ಹಾಗೂ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಶೆಟ್ಟರ್ ತಿಳಿಸಿದರು.
ಗೋಕಾಕ, ಮೂಡಲಗಿ ಹಾಗೂ ಯರಗಟ್ಟಿ ಪಟ್ಟಣಗಳ ಸಮೀಪ ನೂತನ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸುವಂತೆ ಹಲವು ವರ್ಷಗಳಿಂದ ಬೇಡಿಕೆಯಿದೆ ಎಂದು ಅವರು ಹೇಳಿದರು.
ನವೋದಯ ಶಾಲೆ: ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿ ಸಮೀಪ ನೂತನ ಜವಾಹರ್ ನವೋದಯ ವಿದ್ಯಾಲಯವನ್ನು ಸ್ಥಾಪಿಸುವಂತೆ ಕೂಡ ಮನವಿ ಸಲ್ಲಿಸಲಾಗಿದೆ. ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಶಾಲೆಯ ಸ್ಥಾಪನೆ ಅಗತ್ಯವಾಗಿದೆ ಎಂದು ಸಂಸದರು ಸಚಿವರ ಗಮನಕ್ಕೆ ತಂದರು.
ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಸಕಾರಾತ್ಮಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಕೆವಿ, ನವೋದಯ ಶಾಲೆ ಸ್ಥಾಪನೆ
