ಬೆಳಗಾವಿ,: ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ಸದ್ಯಕ್ಕೆ ಪ್ರವಾಹದ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜತೆಗೆ ನದಿಪಾತ್ರದ ಸ್ಥಳಗಳೂ ಸೇರಿದಂತೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭಾನುವಾರ(ಜು.23) ಭೇಟಿ ನೀಡಿದ ಅವರು ಮಾಧ್ಯಮಗಳಿಗೆ ಈ ವಿಷಯ ತಿಳಿಸಿದರು.

ಜಿಲ್ಲೆಯ ಪ್ರಮುಖ ನದಿಗಳಾದ ಕೃಷ್ಣಾ ನದಿಯಲ್ಲಿ 1.07 ಲಕ್ಷ ಕ್ಯೂಸೆಕ್, ಘಟಪ್ರಭಾ ನದಿಯಲ್ಲಿ 30 ಸಾವಿರ ಕ್ಯೂಸೆಕ್ ಹಾಗೂ ಮಲಪ್ರಭಾ ನದಿಯಲ್ಲಿ 13.50 ಸಾವಿರ ಕ್ಯೂಸೆಕ್ ಒಳಹರಿವು ಇರುತ್ತದೆ. 

ಇದರಿಂದಾಗಿ ಆಲಮಟ್ಟಿ, ಹಿಡಕಲ್ ಮತ್ತು ನವಿಲುತೀರ್ಥ ಜಲಾಶಯಗಳಲ್ಲಿ ಕ್ರಮೇಣವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಕುಡಿಯಲು ಹಾಗೂ ಬೆಳೆಗಳಿಗೆ ಅನುಕೂಲವಾಗಲಿದೆ.

ರೈತರು-ಸಾರ್ವಜನಿಕರು ಎಚ್ಚರ ವಹಿಸಬೇಕು:

ಜಿಲ್ಲೆಯಾದ್ಯಂತ ಇರುವ ಕೆಲವು ಸಣ್ಣ ಸೇತುವೆಗಳು ಮುಳುಗಡೆಯಾಗಿದ್ದು, ಸಾರ್ವಜನಿಕರು ಹಾಗೂ ರೈತರು ಎಚ್ಚರಿಕೆ ವಹಿಸಬೇಕು. ಜಲಾವೃತವಾಗಿರುವ ಈ ಮಾರ್ಗಗಳನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧತೆ:

ಜಿಲ್ಲೆಯಲ್ಲಿ ಇದುವರೆಗೆ ಪ್ರವಾಹ ಪರಿಸ್ಥಿತಿ ಎದುರಾಗಿಲ್ಲ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ನದಿತೀರದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಸೇರಿದಂತೆ ವಿವಿಧಇಲಾಖೆಗಳಿಂದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಕಾಳಜಿ ಕೇಂದ್ರಗಳನ್ನು ಕೂಡ ಗುರುತಿಸಲಾಗಿರುತ್ತದೆ. ತುರ್ತು ಸಂದರ್ಭಗಳಲ್ಲಿ ಜನರು ಹಾಗೂ ಜಾನುವಾರುಗಳನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ.

ತುರ್ತು ಕಾರ್ಯಾಚರಣೆಗೆ ಅಗತ್ಯವಿರುವ ಬೋಟ್ ಮತ್ತಿತರ ಸಲಕರಣೆಗಳು ಸಿದ್ಧವಾಗಿಟ್ಟುಕೊಳ್ಳಲಾಗಿದೆ. ಇದಲ್ಲದೇ ಔಷಧವಸ್ತುಗಳು, ಜಾನುವಾರುಗಳಿಗೆ ಮೇವು ಸೇರಿದಂತೆ ಪ್ರತಿಯೊಂದು ವಿಷಯಗಳ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಇಲಾಖೆಗಳು ಮಾಡಿಕೊಂಡಿವೆ ಎಂದು ಜಿಲ್ಲಾಧಿಕಾರಿ ಪಾಟೀಲ ಹೇಳಿದರು.