ಬೆಳಗಾವಿ ಅ.11 : ಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿ.ಎಂ.ಸಿ.‌ನೀಡಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿ.ಎಂ.ಸಿ. ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರಕಾರ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು.

ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ಪಶುವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಅವರು, 

ಈ ರೀತಿಯ ಒಪ್ಪಂದದಿಂದ ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಅವರು‌ ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳು ಮತ್ತು ಜಾನುವಾರುಗಳನ್ನು ಸಾಕಿಕೊಂಡಿರುವ ರೈತ ಸಮುದಾಯಕ್ಕೆ ಪಶು ವೈದ್ಯಕೀಯ ಮಹಾವಿದ್ಯಾಲಯವು ಅನುಕೂಲವಾಗಲಿದೆ ಎಂದು ಹೇಳಿದರು.

ವೈದ್ಯರು, ಔಷಧಿಗಳ ಕೊರತೆಯ ಮಧ್ಯೆಯೂ ಪಶುಸಂಗೋಪನೆ ಇಲಾಖೆಯ ಉತ್ತಮ ಸೇವೆ ಒದಗಿಸುತ್ತಿದೆ ಎಂದು ಸಚಿವ ವೆಂಕಟೇಶ್ ತಿಳಿಸಿದರು.

ರಾಜ್ಯದಲ್ಲಿಯೇ ಅತೀ ಹೆಚ್ಚು ಜಾನುವಾರುಗಳು ಇರುವ ಬೆಳಗಾವಿ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಇದನ್ನು ಪರಿಗಣಿಸಿ ಇನ್ನಷ್ಟು ಉತ್ತಮ ಸೇವೆ ಒದಗಿಸಲು ಬದ್ಧವಿರುವುದಾಗಿ ಅವರು ಭರವಸೆ ನೀಡಿದರು.

ಇದೇ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಥಣಿ ಕ್ಷೇತ್ರದ ಅಭಿವೃದ್ಧಿಯಾಗಬೇಕು ಎಂಬುದು ಶಾಸಕ ಲಕ್ಷ್ಮಣ ಸವದಿ ಅವರ ಏಕೈಕ ಬೇಡಿಕೆಯಾಗಿದೆ ಎಂದರು.

ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಮೂರು ಗ್ಯಾರಂಟಿ ಅನುಷ್ಠಾನಗೊಳಿಸಲಾಗಿದ್ದು, ಇದೇ ತಿಂಗಳಿನಲ್ಲಿ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು. ಬೆಳಗಾವಿಯಲ್ಲಿ 11 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರಕಲಿದೆ ಎಂದು ಹೆಬ್ಬಾಳಕರ್ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದರು.