ಬೆಳಗಾವಿ, ಆ.15:  ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರು ಗಳಿಸಿದ ಸ್ವಾತಂತ್ರ್ಯವು ಜಗತ್ತಿನ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದೆ. ಮಹಾತ್ಮಾ ಗಾಂಧೀಜಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಸುಭಾಷ್‌ಚಂದ್ರ ಬೋಸ್, ಜವಾಹರಲಾಲ್ ನೆಹರೂ, ಲಾಲ್‌ಬಹದ್ದೂರ್ ಶಾಸ್ತ್ರಿ, ಬಾಲಗಂಗಾಧರ ಟಿಳಕ ಸೇರಿದಂತೆ ಇನ್ನೂ ಅನೇಕ ಮಹನೀಯರನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.   77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಮಂಗಳವಾರ (ಆ.15) ಜಿಲ್ಲಾ ಕ್ರೀಡಂಗಣದಲ್ಲಿ ರಾಷ್ಟ್ರ ಧ್ವಜಾರೋಹನ ನೆರವೇರಿಸಿ ಅವರು ಸಂದೇಶ ನೀಡಿದರು.    ಕಿತ್ತೂರು ರಾಣಿ ಚೆನ್ನಮ್ಮ ಮೊಳಗಿಸಿದ ಸ್ವಾತಂತ್ರ್ಯದ ಕಹಳೆಯು ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತು. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದ ಚೆನ್ನಮ್ಮ, ಆಂಗ್ಲರ ಈಸ್ಟ್ ಇಂಡಿಯಾ ಕಂಪೆನಿಗೆ ದುಸ್ವಪ್ನವಾಗಿ ಕಾಡಿದಳು.    ಅದೇ ಕಿತ್ತೂರು ಸಂಸ್ಥಾನದಲ್ಲಿ ಸೇನಾಧಿಪತಿಯಾಗಿದ್ದ ಸಂಗೊಳ್ಳಿ ರಾಯಣ್ಣ ಆಂಗ್ಲರ ಬಂದೂಕುಗಳಿಗೆ ಬೆದರದೇ ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ನೇಣುಗಂಬಕ್ಕೇರಿದ ಅಪ್ರತಿಮ ದೇಶಭಕ್ತ. ಅಂತಹ ರಾಯಣ್ಣ ಹುಟ್ಟಿದ್ದು ಆಗಸ್ಟ್ 15ರಂದು ವೀರಮರಣವನ್ನಪ್ಪಿದ್ದು ಜನವರಿ 26.    ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮತ್ತೊಬ್ಬ ಮಹನೀಯರು ಶ್ರೀ ಗಂಗಾಧರ ದೇಶಪಾಂಡೆ. ‘ಕರ್ನಾಟಕದ ಸಿಂಹ’ ಹಾಗೂ ‘ಕರ್ನಾಟಕದ ಖಾದಿ ಭಗೀರಥ’ ಎಂದು ಗುರುತಿಸಿಕೊಂಡಿದ್ದ ದೇಶಪಾಂಡೆಯವರ ಕೊಡುಗೆ ಅಪಾರ. ಇವರ ಜತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಅನೇಕರನ್ನು ಇಂದು ನಾವು ನೆನಪಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.    ಈ ಸಂದರ್ಭದಲ್ಲಿ ಸಂಸದೆ ಮಂಗಳಾ ಅಂಗಡಿ, ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಐಜಿಪಿ ವಿಕಾಸ್ ಕುಮಾರ್ ವಿಕಾಸ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್, ನಗರ ಪೊಲೀಸ್ ಆಯುಕ್ತರಾದ ಎಸ್.ಎನ್ ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಮತ್ತಿತರ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.