ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅರ್ನಿಷ್ಟಾವಧಿ ಧರಣಿ ನಡೆಸುತ್ತಿರುವ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ರಾಜ್ಯಾಧ್ಯಂತ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲೆಯ ಹತ್ತರಗಿ ಮತ್ತು ಹಿರೇಬಾಗೇವಾಡಿ ಟೋಲ್ ನಾಕಾಗಳಲ್ಲಿ ಪಂಚಮಸಾಲಿ ಮುಖಂಡರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಹತ್ತರಗಿ ಟೋಲ್ ನಾಕಾ ಬಳಿ ಮಾಜಿ ಸಚಿವ ಎ.ಬಿ.ಪಾಟೀಲ ನೇತೃತ್ವದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸರಕಾರದ ವಿರುದ್ಧ ಕ್ಕಾರದ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಶಶಿಕಾಂತ ನಾಯಿಕ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ. ಪಾಟೀಲ, ಪದಾಕಾರಿಗಳಾದ ಗುಂಡು ಪಾಟೀಲ, ರಾಜು ಮಗದುಮ್ಮ, ಬಸನಗೌಡ ಪಾಟೀಲ, ವೀರಣ್ಣ ಬಿಸಿರೊಟ್ಟಿ, ರವಿ ಜಿನರಾಳೆ ಸೇರಿ ಮತ್ತಿತರರು ಭಾಗಿಯಾಗಿದ್ದರು. ರಾಷ್ಟ್ರೀಯ ಹೆದ್ದಾರಿ ತಡೆದ ಹಿನ್ನೆಲೆ ಕಿ.ಮೀ. ಗಟ್ಟಲೇ ವಾಹನಗಳು ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಯಿತು.